ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ಸುಮಾರು ₹1,52,000 ಮೌಲ್ಯದ ಮಾದಕ ವಸ್ತು ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂಬಾತನನ್ನು ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ಬಂಧಿಸಲಾಗಿದೆ.

ಆರೋಪಿ ಬ್ರಹ್ಮಾವರದ ಆಕಾಶವಾಣಿ ಸಮೀಪದ ಸ್ವರ್ಣ ರೆಸಿಡೆನ್ಸಿಯಲ್ಲಿ ವಾಸವಾಗಿದ್ದು, ಮೂಲತಃ ಶಿರೂರಿನ ಜೆ.ಎಂ. ಕ್ರಾಸ್ ರಸ್ತೆ, ಮುಸ್ಲಿಂ ಮೊಹಲ್ಲಾ ನಿವಾಸಿಯಾಗಿದ್ದಾನೆ. ಈತ ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲ ಭಾಗಗಳ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನಿಂದ 1 ಗ್ರಾಂ 03 ಮಿಲಿಗ್ರಾಂ ಎಂಡಿಎಂಎ, ಮಾದಕ ವಸ್ತು ಸಾಗಾಟಕ್ಕೆ ಬಳಸಲಾಗುತ್ತಿದ್ದ ಒಂದು ಸ್ಕೂಟರ್ ಸೇರಿದಂತೆ ಒಟ್ಟು ₹1.52 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026 ರಡಿ ಎನ್‌ಡಿಪಿಎಸ್ ಕಾಯ್ದೆ-1985ರ ಕಲಂ 8(C) ಹಾಗೂ 22(b) ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

16 − 9 =